2 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ
ಉತ್ತಮ ಜೀವನಕ್ಕೆ ಯೋಗ ಸಹಕಾರಿ
ಜಿಲ್ಲಾಧಿಕಾರಿ ಸ್ನೇಹಲ್ ಆರ್.
ಧಾರವಾಡ ಪ್ರತಿದಿನ ಯೋಗ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಯೋಗಾಭ್ಯಾಸದಿಂದ ಆರೋಗ್ಯ ವೃದ್ಧಿಯಾಗಲಿದೆ. ಉತ್ತಮ ಜೀವನ ನಡೆಸಲು ಯೋಗ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.
ಇಂದು ನಗರದ ಡಾ. ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಆಯುಷ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಧಾರವಾಡ ಜಿಲ್ಲಾ ಆಯುಷ ಇಲಾಖೆಯ ರಾಷ್ರ್ಟೀಯ ಆಯುಷ ಅಭಿಯಾನ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸೌಟ್ಸ್ ಮತ್ತು ಗೈಡ್ಸ್, ಕೆ.ಎಂ.ಎಫ್., ಎಲ್ಲ ಸರ್ಕಾರಿ ಇಲಾಖೆಗಳು, ಜಿಲ್ಲೆಯ ಎಲ್ಲ ಆಯುಷ್ ಮೆಡಿಕಲ್ ಕಾಲೇಜುಗಳು, ಖಾಸಗಿ ವೈದ್ಯಕೀಯ ಸಂಸ್ಥೆಗಳು, ಆಯುಷ್ ಫೆಡರೇಶನ್ ಆಫ್ ಇಂಡಿಯಾ (AFI), ಪತಂಜಲಿ ಯೋಗ ಸಮಿತಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಜಿಲ್ಲೆಯ ಎಲ್ಲ ಯೋಗ ಸಂಸ್ಥೆಗಳು ಹಾಗೂ ಸರ್ಕಾರೇತರ ಸಂಘ-ಸಂಸ್ಥೆಯವರು, ಎನ್.ಎಸ್.ಎಸ್., ಎನ್.ಸಿ.ಸಿ., ನೆಹರು ಯುವ ಕೇಂದ್ರ ಇವುಗಳ ಸಹಕಾರದೊಂದಿಗೆ ಆಯೋಜಿಸಿದ್ದ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದು 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಧ್ಯೇಯವಾಕ್ಯದಡಿಯಲ್ಲಿ ಯೋಗ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಅಪಾರ ಪ್ರಮಾಣದಲ್ಲಿ ಯೋಗಾಸಕ್ತರು ಸೇರಿರುವುದು ಸಂತೋಷದ ವಿಷಯ ಎಂದು ಅವರು ತಿಳಿಸಿದರು.
ನನ್ನ ತಾಯಿ ಕೂಡ ಸುಮಾರು 15 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದಾರೆ. ವಯಸ್ಸಾದರು ಸಹ ಅವರು ಉತ್ತಮ ಆರೋಗ್ಯವನ್ನು ಹೊಂದಿದ್ದಾರೆ. ಎಲ್ಲರೂ ಕೂಡ ಯೋಗಾಭ್ಯಾಸ ಮಾಡಿ. ಉತ್ತಮ ಆರೋಗ್ಯಕರ ಜೀವನವನ್ನು ನಡೆಸಲು ಮುಂದಾಗಬೇಕು. ವಯಸ್ಸಾದ ನಂತರ ಹಲವಾರು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅವುಗಳನ್ನು ತಡೆಯಲು ಯೋಗವನ್ನು ರೂಢಿಸಿಕೊಳ್ಳಬೇಕು. ಒಳ್ಳೆಯ ರೀತಿಯಲ್ಲಿ ವಯೋವೃದ್ಧ ಜೀವನ ನಡೆಸಬಹುದು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.
ಅಂತರಾಷ್ಟ್ರೀಯ ಯೋಗ ತಜ್ಞರಾದ ಜಗದೀಶ ಮಳಗಿ, ಇಂದ್ರಾ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಜಯಂತಿ ಅವರು ಯೋಗಾಭ್ಯಾಸ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಪರಶುರಾಮ ಎಫ್. ಕೆ., ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಗಣೇಶ ಎಸ್. ಕಬಾಡೆ, ಎಸ್.ಎಫ್.ಸಿದ್ಧನಗೌಡ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಇತರರು ಭಾಗವಹಿಸಿದ್ದರು.
ಜಿಲ್ಲಾ ಆಯುಷ ಇಲಾಖೆಯ ವೈದ್ಯಾಧಿಕಾರಿ ಡಾ.ಅಮೃತಾ ಪಾಸ್ತೆ ಅವರು ಸ್ವಾಗತಿಸಿ, ವಂದಿಸಿದರು.



